ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೇ..?

ಬೆಂಗಳೂರು: ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು. ಈಗ ತನಗೆ ಪ್ರಾಣ ಭಯವಿದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರು ಅಪಾಯವಾದರೆ ಅದಕ್ಕೆ ರಾಜ್ಯದ ಮುಖ್ಯಮಂತ್ರಿ, ಗೃಹಸಚಿವರು ಮತ್ತು ಬಿಜೆಪಿಯ ಸರ್ಕಾರ ಹೊಣೆಯಾಗುತ್ತೆದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆ ಅಪನಂಬಿಕೆ ವ್ಯಕ್ತಪಡಿಸಿರುವುದು ಗಂಭೀರವಾದ ವಿಷಯ ಎಂದಿದ್ದಾರೆ.

ತನಗೆ ಪ್ರಾಣ ಭಯ ಇದೆ ಎಂದು ಆಕೆ ಬರೆದಿರುವುದು ಆತಂಕದ ವಿಚಾರ. ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸಂತ್ರಸ್ಥೆ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಇದರ ಫಲಿತಾಂಶ ಏನು? ಎಂದು ಕೇಳಿದರು. ಸಿಡಿ ಬಹಿರಂಗ ಗೊಂಡು 27 ದಿನಗಳು ಕಳೆದರೂ ಸಂತ್ರಸ್ಥ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ. ಪೊಲೀಸರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ಎಂದು ಅನುಮಾನ ವ್ಯಕ್ತ ಪಡಿಸಿದರು. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕು ಎಂದಿದ್ದಾರೆ.