ರಿಯಲ್ ಎಸ್ಟೇಟ್ ಉದ್ಯಮಿಯ ಭೀಕರ ಕೊಲೆ

ಬೆಂಗಳೂರು: ನಗರದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯ ಕೊಲೆ ಪ್ರಕರಣ. ಈ ಘಟನೆ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ವಿಕ್ರಂ ಎಂಬುವವರು ಸಾವನ್ನಪ್ಪಿದ್ದಾರೆ. ತೀವ್ರ ಗಾಯಗೊಂಡಿರುವ ಉದ್ಯಮಿ ಸುರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ಸುರೇಶ್, ಸಹಕಾರ ನಗರದ ಬಳಿ ಕಚೇರಿ ಹೊಂದಿದ್ದರು. ಸುರೇಶ್ ಜೊತೆ ವಿಕ್ರಂ ಕೂಡ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ದೊರೆತಿದೆ.

ಭಾನುವಾರ ಸಂಜೆ ಉದ್ಯಮಿಯ ಕಚೇರಿ ಬಳಿ ಕಾರಿನಲ್ಲಿ ಬಂದ 6 ದುಷ್ಕರ್ಮಿಗಳು, ಇಬ್ಬರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವಿಕ್ರಂ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸುರೇಶ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುಷ್ಕರ್ಮಿಗಳು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಹಣಕಾಸಿನ ವಿಚಾರವಾಗಿ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

NEWS DESK

TIMES OF BENGALURU