ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಬಂದ್

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಧರಣಿ ಆರಂಭಿಸಿದ್ದು, ಕೆಎಸ್‍ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ಬಸ್‍ಗಳ ಸಂಚಾರ ಸ್ಥಗಿತಗೊಂಡಿದೆ.

ಇಂದಿನಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ ಆರಂಭಗೊಳ್ಳಲಿದ್ದು, ಸುಮಾರು 24 ಸಾವಿರ ಬಸ್‍ಗಳು ಸಂಚರಿಸುವುದಿಲ್ಲ ಎಂದು ತಿಳಿದುಬಂದಿದೆ. ಕಳೆದ ಡಿಸೆಂಬರ್ ನಲ್ಲಿಯೂ ಸಾರಿಗೆ ನೌಕರರು ನಾಲ್ಕು ದಿನಗಳ ಕಾಲ ಮುಷ್ಕರ ನಡೆಸಿದ್ದರು. ಮೂರು ತಿಂಗಳ ಅಂತರದಲ್ಲಿ ಮತ್ತೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಸದ್ಯಕ್ಕೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 6ನೇ ವೇತನ ಆಯೋಗದ ಶಿಫಾರಸು ಜಾರಿ ಸದ್ಯಕ್ಕೆ ಸಾಧ್ಯವಿಲ್ಲ ಹಾಗೂ ಈ ವಿಷಯದಲ್ಲಿ ಸಂಧಾನದ ಪ್ರಶ್ನೆ ಇಲ್ಲ. ಮುಷ್ಕರ ನಡೆಸಿದರೆ ಎಸ್ಮಾ ಕಾಯ್ದೆ ಹೇರಲು ಹಿಂಜರಿಯುವುದಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

NEWS DESK

TIMES OF BENGALURU