1000ಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದ ಪೊಲೀಸರು ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್​ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಲಾಕ್​ಡೌನ್ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ.

ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ ದಾಖಲಾಗಿದ್ದ ಕೊಲೆ ಪ್ರಕರಣಗಳು ಹಾಗೂ ಜೈಲಿನಲ್ಲೇ ಕುಳಿತು ರೌಡಿಸಂ ನಡೆಸುತ್ತಿದ್ದ ವಿಚಾರವನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್​ ಪಂತ್, ಹೆಚ್ಚುವರಿ ಆಯುಕ್ತರು, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದರು. ಅದರಂತೆ ಆಯಾ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ನಿಗಾ ವಹಿಸಿದ್ದ ಪೊಲೀಸರು ಇಂದು ಬೆಳಗ್ಗೆ ಬೆಂಗಳೂರು ನಗರದಾದ್ಯಂತ ಸಾವಿರಕ್ಕೂ ಹೆಚ್ಚು ರೌಡಿ ಶೀಟರ್ಸ್​ ಮನೆ ಮೇಲೆ ದಾಳಿ ನಡೆಸಿ ನೂರಾರು ಜನರನ್ನು ವಶಕ್ಕೆ ಪಡೆದಿದ್ದಾರೆ.

NEWS DESK

TIMES OF BENGALURU